ಮೊಸರಲ್ಲಿ ಕಲ್ಲು ಹುಡುಕಬೇಡಿ, ಈಶ್ವರಪ್ಪ ಅವರಿಗೆ ಸಿಎಂ ತಿರುಗೇಟು !08-06-2017 367

ಬೆಂಗಳೂರು:- ರಾಜ್ಯದ ರೈತರು ವಿವಿಧ ಸಹಕಾರ ಸಂಘಗಳಿಂದ ಪಡೆದಿರುವ ಸಾಲವನ್ನು ಮನ್ನಾ ಮಾಡಲು ವಿರೋಧವಿಲ್ಲ. ಆದರೆ ಕೇಂದ್ರ ಸರ್ಕಾರವು, ರಾಜ್ಯ ಸರ್ಕಾರದೊಂದಿಗೆ ಸಹಕರಿಸಿದರೆ ಸಾಲ ಮನ್ನಾ ಮಾಡಲು ಸಿದ್ಧ ಎಂದು ಸಿದ್ದರಾಮಯ್ಯ ಅವರು ವಿಧಾನ ಪರಿಷತ್ ನಲ್ಲಿ ಸ್ಪಷ್ಟಪಡಿಸಿದರು. ರಾಜ್ಯದ ರೈತರು ಪಡೆದಿರುವ ಸಾಲವನ್ನು ಮನ್ನಾ ಮಾಡಲು ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಅಂತಹ ಪ್ರಯತ್ನಗಳು ನಡೆಯುತ್ತಿಲ್ಲ ಎಂದು ಮುಖ್ಯಮಂತ್ರಿಗಳು ಆರೋಪಿಸಿದರು. ಬಿಜೆಪಿಯ ಸಂಸತ್ ಸದಸ್ಯರು ಈವರೆಗೂ ಸಂಸತ್ ನಲ್ಲಿ ರಾಜ್ಯದ ಬರಗಾಲದ ಬಗ್ಗೆ ಪ್ರಸ್ತಾಪಿಸುವ ಗೋಜಿಗೆ ಹೋಗಿಲ್ಲ. ಸಾಲ ಮನ್ನಾ ಮಾಡಿ ಎಂದು ಕೇಂದ್ರ ಸರ್ಕಾರದ ಮೇಲೆ ಒತ್ತಡವನ್ನೂ ಹೇರಿಲ್ಲ ಎಂದರು. ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರವು ತೆರಿಗೆ ನೀಡುತ್ತದೆ ಎಂದ ಮುಖ್ಯಮಂತ್ರಿಗಳು, ರೈತರ ಸಾಲ ಮನ್ನಾ ಮಾಡಲು ಕೇಂದ್ರವು ರಾಜ್ಯದ ನೆರವಿಗೆ ಬರಬೇಕು ಎಂದು ಹೇಳಿದರು.  ಕೇಂದ್ರಕ್ಕೆ ನಿಯೋಗ ಕೊಂಡೊಯ್ದಾಗ ಬಿಜೆಪಿ ನಾಯಕರು ತುಟಿ ಬಿಚ್ಚುವುದಿಲ್ಲ. ಇಲ್ಲಿ ಬಂದಾಗ ರೈತರ ಸಾಲ ಮನ್ನಾ ಮಾಡುವುದಿಲ್ಲ ಎಂದು ಬೊಬ್ಬೆ ಹೊಡೆಯುತ್ತಾರೆ ಎಂದು ತರಾಟೆಗೆ ತೆಗೆದುಕೊಂಡರು. ಮತ್ತು ಸಚಿವ ಸಂಪುಟಕ್ಕೆ ಯಾರನ್ನು ಸೇರಿಸಬೇಕು ಅಥವಾ ತೆಗೆಯಬೇಕು ಎಂಬುದು ನನ್ನ ಪರಮಾಧಿಕಾರಕ್ಕೆ ಬಿಟ್ಟ ವಿಚಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನ ಪರಿಷತ್ ನಲ್ಲಿ ಇಂದು ಸಮರ್ಥಿಸಿಕೊಂಡರು. ಕಾಗೋಡು ತಿಮ್ಮಪ್ಪ ಮತ್ತು ರಮೇಶ್ ಕುಮಾರ್ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಂಡು ಅವರ ಬಾಯಿ ಮುಚ್ಚಿಸಿದ್ದೀರಾ ಎಂಬ ಪ್ರತಿಪಕ್ಷದ ನಾಯಕ ಈಶ್ವರಪ್ಪ ಅವರ ಟೀಕೆಗೆ ಮುಖ್ಯಮಂತ್ರಿಗಳು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ಕಾಗೋಡು ತಿಮ್ಮಪ್ಪ ಮತ್ತು ರಮೇಶ್ ಕುಮಾರ್ ಅವರು ಪಕ್ಷದ ಹಿರಿಯ ನಾಯಕರು. ಹಾಗಾಗಿ ಅವರನ್ನು ಮಂತ್ರಿಗಳನ್ನಾಗಿ ಮಾಡಿದ್ದೇನೆ. ಮೊಸರಲ್ಲಿ ಕಲ್ಲು ಹುಡುಕಬೇಡಿ ಎಂದು ಮುಖ್ಯಮಂತ್ರಿಗಳು ಈಶ್ವರಪ್ಪ ಅವರಿಗೆ ತಿರುಗೇಟು ನೀಡಿದರು.


ಒಂದು ಕಮೆಂಟನ್ನು ಬಿಡಿ